ಕಬಿನಿ ನದಿ ಪಾತ್ರದಲ್ಲಿ ಪ್ರವಾಹ, ಜಲಾಶಯಕ್ಕೆ ಒಳಹರಿವು ಹೆಚ್ಚಳ
ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮಘಟ್ಟ ಮತ್ತು ಕರಾವಳಿ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನೇತ್ರಾವತಿ ನದಿಯ ನೀರಿನ ಹರಿವು ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ.
ಕೊಡಗು ಜಿಲ್ಲೆಯಲ್ಲೂ ಧಾರಾಕಾರ ಮಳೆ ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಭಾಗಮಂಡಲ ಸಂಪೂರ್ಣ ಜಲಾವೃತವಾಗಿದೆ. ತ್ರಿವೇಣಿ ಸಂಗಮ, ಸ್ನಾನಘಟ್ಟಗಳು ಹಾಗೂ ಉದ್ಯಾನವನಗಳು ನೀರಿನಲ್ಲಿ ಮುಳುಗಿದ್ದು, ಭಾಗಮಂಡಲ–ತಲಕಾವೇರಿ ರಸ್ತೆ ಸಹ ಜಲಾವೃತಗೊಂಡಿದೆ. ಇದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸ್ಥಳೀಯರು ಮತ್ತು ಪ್ರವಾಸಿಗರು ಫ್ಲೈಓವರ್ ಮೂಲಕ ಸಂಚರಿಸುತ್ತಿದ್ದಾರೆ.

ಇತ್ತ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಕಬಿನಿಯಿಂದ ನೀರು ಬಿಡುಗಡೆ ಪ್ರಮಾಣವನ್ನು 25 ಸಾವಿರ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ. ಈ ಹಿಂದೆ 10ರಿಂದ 12 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿತ್ತು. ಒಳಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗಿದ್ದು, ಕಬಿನಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ನದಿ ತೀರದ ಗ್ರಾಮಗಳ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಮುಂದಿನ ದಿನಗಳಲ್ಲೂ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜಲಾಶಯಗಳ ಒಳಹರಿವು ಮತ್ತಷ್ಟು ಹೆಚ್ಚುವ ಆತಂಕ ವ್ಯಕ್ತವಾಗಿದ್ದು, ಪರಿಸ್ಥಿತಿಯ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ.