ಕಾವೇರಿ ನೀರು ವಿವಾದ; ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ, ಹಲವೆಡೆ ಪ್ರತಿಭಟನೆ
ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಗುರುವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬಂದ್ ಹಿನ್ನೆಲೆಯಲ್ಲಿ ಅಲ್ಲಲ್ಲಿ ಪ್ರತಿಭಟನೆಗಳು ನಡೆದಿವೆ. ಸಾರಿಗೆ ಹಾಗೂ ವಾಣಿಜ್ಯ ಚಟುವಟಿಕೆಗಳು ಎಂದಿನಂತೆ ಮುಂದುವರಿದಿದ್ದರಿಂದ ಜನ ಜೀವನದ ಮೇಲೆ ಬಂಧ್ ಪರಿಣಾಮ ಬೀರಿಲ್ಲ.
ಬರ ಪರಿಸ್ಥಿತಿಯ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶಿಸಿರುವುದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಖಂಡಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಬಂದ್‌ಗೆ ಕರೆ ನೀಡಿದ್ದರು. ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದರೆ, ಹಲವು ಸಂಘಟನೆಗಳು ನೈತಿಕ ಬೆಂಬಲ ಘೋಷಿಸಿವೆ.
ಬೆಂಗಳೂರು, ಮೈಸೂರು, ರಾಮನಗರ, ಹಾಸನ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಆದರೆ ಬಸ್ ಸಂಚಾರಕ್ಕೆ ಯಾವುದೇ ಪ್ರಮುಖ ಅಡ್ಡಿ ಉಂಟಾಗಿಲ್ಲ. ಸಾರಿಗೆ ಸೇವೆಗಳು ಹಾಗೂ ಬಹುತೇಕ ವಾಣಿಜ್ಯ ಚಟುವಟಿಕೆಗಳು ಸಹಜವಾಗಿ ನಡೆದವು.

ಹಲವೆಡೆ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ
ಮೈಸೂರಿನಲ್ಲಿ ಬೆಳಗ್ಗೆಯೇ ಪ್ರತಿಭಟನೆ ನಡೆಸಿದ ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಇತರೆ ಜಿಲ್ಲೆಗಳಲ್ಲಿಯೂ ಪ್ರತಿಭಟನೆ ನಡೆಸಲು ಮುಂದಾದವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆಗಳು ವರದಿಯಾಗಿವೆ.
ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ನಿಗಾ ವಹಿಸಿದ್ದಾರೆ.
ಶಾಲಾ-ಕಾಲೇಜುಗಳಿಗೆ ಶಿಕ್ಷಣ ಸಂಸ್ಥೆಗಳ ಸಂಘಟನೆಗಳು ಬಂದ್‌ಗೆ ಕೇವಲ ನೈತಿಕ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ಬಹುತೇಕ ಕಡೆ ಎಂದಿನಂತೆ ನಡೆದವು. ಒಟ್ಟಾರೆ ಕಾವೇರಿ ಹೋರಾಟಕ್ಕೆ ಬೆಂಬಲ ವ್ಯಕ್ತವಾದರೂ, ಬಂದ್‌ನ ಪರಿಣಾಮ ರಾಜ್ಯಾದ್ಯಂತ ವ್ಯಾಪಕವಾಗಿರಲಿಲ್ಲ