ದೇವರಬೆಳಕೆರೆ, ಭೈರನಪಾದ ಏತ ನೀರಾವರಿ ಯೋಜನೆಗಳಿಗೆ ಮಂಜೂರಾತಿ ನೀಡುವಂತೆ ಸಿಎಂಗೆ ರೈತರ ಮನವಿ
ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ದೇವರಬೆಳಕೆರೆಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಏತ ನೀರಾವರಿ ಯೋಜನೆ ಹಾಗೂ ಭದ್ರಾ ಅಚ್ಚುಕಟ್ಟು ಬಾಧಿತ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಭೈರನಪಾದ ಏತ ನೀರಾವರಿ ಯೋಜನೆಗಳಿಗೆ ತಕ್ಷಣ ಮಂಜೂರಾತಿ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ನೇತೃತ್ವದ ರೈತರ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಸುಮಾರು ₹75 ಕೋಟಿ ಅಂದಾಜು ವೆಚ್ಚದ ದೇವರಬೆಳಕೆರೆ ಯೋಜನೆಯಿಂದ ಆ ಭಾಗದ ಸಾವಿರಾರು ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶವಿದೆ.

ಇನ್ನು ಸುಮಾರು ₹136 ಕೋಟಿ ಅಂದಾಜು ವೆಚ್ಚದ ಭೈರನಪಾದ ಏತ ನೀರಾವರಿ ಯೋಜನೆಯಡಿ ತುಂಗಭದ್ರಾ ನದಿಯಿಂದ ನೀರೆತ್ತಿ 1,632 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ ಹಾಗೂ ಆರು ಪ್ರಮುಖ ಕೆರೆಗಳನ್ನು ತುಂಬಿಸುವ ಗುರಿ ಹೊಂದಲಾಗಿದೆ.
ಎರಡೂ ಯೋಜನೆಗಳಿಗೆ ತಕ್ಷಣ ಮಂಜೂರಾತಿ ನೀಡಿ, ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಅಲ್ಲದೆ, ಕಾಮಗಾರಿಗಳ ಅನುಷ್ಠಾನದ ಜವಾಬ್ದಾರಿಯನ್ನು ಕರ್ನಾಟಕ ನೀರಾವರಿ ನಿಗಮ ನಿಯಮಿತಕ್ಕೆ ವಹಿಸುವಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು.