ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು
ಬೆಂಗಳೂರು: 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲೊಬ್ಬರಾಗಿದ್ದ ಅಬ್ದುಲ್ ಖಾದರ್ (60) ಅವರು ನ್ಯಾಯಾಲಯದ ತೀರ್ಪು ಹೊರಬೀಳುವ ಮುನ್ನವೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಡಿಕೇರಿ ಜಿಲ್ಲೆಯ ವಿರಾಜಪೇಟೆ ಮೂಲದ ಅಬ್ದುಲ್ ಖಾದರ್ ಅವರನ್ನು 2010ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಶುಕ್ರವಾರ ಅವರ ಆರೋಗ್ಯ ಹಠಾತ್ತನೆ ಹದಗೆಟ್ಟ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ.
2008ರ ಜುಲೈ 25ರಂದು ಬೆಂಗಳೂರಿನಲ್ಲಿ ಅರ್ಧ ಗಂಟೆಯೊಳಗೆ ಏಳು ಕಡೆ ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಮಡಿವಾಳ ಪೊಲೀಸ್ ಚೆಕ್‌ಪೋಸ್ಟ್ ಸಮೀಪದ ಬಸ್ ನಿಲ್ದಾಣದಲ್ಲಿ ನಡೆದ ಸ್ಫೋಟದಲ್ಲಿ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ಮೃತಪಟ್ಟಿದ್ದರು ಹಾಗೂ ಹಲವರು ಗಾಯಗೊಂಡಿದ್ದರು.
ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಕರ್ನಾಟಕ ಪೊಲೀಸರು ನಡೆಸಿದ್ದು, ಹಲವರನ್ನು ಬಂಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಎಫ್‌ಐಆರ್‌ಗಳು ದಾಖಲಾಗಿದ್ದು, ತನಿಖೆ ಹಲವು ವರ್ಷಗಳಿಂದ ಮುಂದುವರಿದಿತ್ತು.