ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಸಾರ್ವಜನಿಕ ದೋಷಾರೋಪಣೆ’: ರಾಜೀನಾಮೆಗೆ ‘ಇಂಡಿಯಾ’ ಒಕ್ಕೂಟ ಆಗ್ರಹ
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ‘ಇಂಡಿಯಾ’ (INDIA) ಒಕ್ಕೂಟ ಶನಿವಾರ ‘ಸಾರ್ವಜನಿಕ ದೋಷಾರೋಪಣೆ’ (Public Impeachment) ಕಾರ್ಯಕ್ರಮ ಆಯೋಜಿಸಿತು. ಈ ವೇಳೆ ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮುಖ್ಯ ಚುನಾವಣಾ ಆಯುಕ್ತರು ತಕ್ಷಣ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಜ್ಞಾನೇಶ್ ಕುಮಾರ್ ವಿರುದ್ಧ ದೋಷಾರೋಪಣೆ ಮಂಡಿಸಿದರು ಎಂದು ವೇಣುಗೋಪಾಲ್ ತಿಳಿಸಿದರು.
ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದವರು ನಾಗರಿಕರು ತಮ್ಮ ಸಾಂವಿಧಾನಿಕ ಮತದಾನದ ಹಕ್ಕಿನಿಂದ ವಂಚಿತರಾದ ಘಟನೆಗಳನ್ನು ಕಾರ್ಯಕ್ರಮದಲ್ಲಿ ವಿವರಿಸಿದರು. ಈ ಸಂದರ್ಭದಲ್ಲಿ ವಿರೋಧ ಪಕ್ಷಗಳ ನಾಯಕರು ‘ವೋಟ್ ಚೋರ್, ಗಡ್ಡಿ ಛೋಡ್’ ಎಂಬ ಘೋಷಣೆ ಮೊಳಗಿಸಿದರು.

ಚುನಾವಣಾ ವ್ಯವಸ್ಥೆಯಲ್ಲಿ ಗಂಭೀರ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ ವೇಣುಗೋಪಾಲ್, ಇದಕ್ಕೆ ಮುಖ್ಯ ಚುನಾವಣಾ ಆಯುಕ್ತರೇ ಹೊಣೆ ಎಂದು ದೂರಿದರು. ಇಂತಹ ಆರೋಪಗಳ ಹಿನ್ನೆಲೆಯಲ್ಲಿ ಅವರು ಹುದ್ದೆಯಲ್ಲಿ ಮುಂದುವರಿಯಲು ನೈತಿಕ ಹಕ್ಕು ಹೊಂದಿಲ್ಲ ಎಂದು ಹೇಳಿ ರಾಜೀನಾಮೆಗೆ ಒತ್ತಾಯಿಸಿದರು.
ಈ ಕಾರ್ಯಕ್ರಮವು ಮುಂದಿನ ದೊಡ್ಡ ಅಭಿಯಾನಕ್ಕೆ ಮುನ್ನುಡಿಯಾಗಿದೆ ಎಂದು ಬಣ್ಣಿಸಿದ ಅವರು, ‘ಇಂಡಿಯಾ’ ಒಕ್ಕೂಟ ಆಯೋಜಿಸಲಿರುವ ಬೃಹತ್ ರ್ಯಾಲಿ ಐತಿಹಾಸಿಕವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.