ಡಿಕೆಶಿ ಪಟ್ಟಾಭಿಷೇಕ; ನೂತನ ಸಂಪುಟದ ಪ್ರಮಾಣವಚನ
ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.

ಹೈಕೋರ್ಟ್ ಮುಖ್ಯನ್ಯಾಯಮೂರ್ತಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಹಿಮಾಚಲ ಪ್ರದೇಶ ಸಿಎಂ ಸುಖವೇಂದರ್ ಸಿಂಗ್, ತೆಲಂಗಾಣ ಸಿಎಂ ವೇಮಂತ್ ರೆಡ್ಡಿ, ಕೇರಳ ಸಿಎಂ ಸತೀಶನ್, ಸಂಸತ್ ಸದಸ್ಯರಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ ಮೊದಲಾದ ನಾಯಕರ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಜನತೆಗೆ ನಮಸ್ಕರಿಸಿ, ಅಜ್ಜಯ್ಯ ಫೋಟೋಗೆ ನಮಿಸಿ, ಸಂವಿಧಾನದ ಪುಸ್ತಕವನ್ನು ಹಿಡಿದುಕೊಂಡು ವೀರ ಅಜ್ಜಯರ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ ವೈಖರಿ ಗಮನಸೆಳೆಯಿತು.

ಇದೇ ವೇಳೆ, ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದರು. ಸಚಿವರಾಗಿ ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ.ಖಾದರ್, ಈಶ್ವರ್ ಖಂಡ್ರೆ, ಡಾ.ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್, ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಸರ್ವಧರ್ಮಗಳ ಗುರುಗಳು, ಸ್ವಾಮೀಜಿಗಳು, ರಾಜಕೀಯ ನಾಯಕರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.