12 ವರ್ಷಗಳಲ್ಲಿ 50 ಕೋಟಿ ಜನರು ಬಡತನದಿಂದ ಮುಕ್ತ: ಪ್ರಧಾನಿ ಮೋದಿ
ಖರಗ್‌ಪುರ: ಕಳೆದ 12 ವರ್ಷಗಳಲ್ಲಿ ಭಾರತ ತನ್ನ ಸಾಂಪ್ರದಾಯಿಕ ಚಿಂತನೆಗಳ ಮಿತಿಗಳನ್ನು ಮೀರಿ ದೇಶದ ಸಾಮರ್ಥ್ಯವನ್ನು ಅನಾವರಣಗೊಳಿಸಿದೆ. ಹೊಸ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಬಡವರ ಸಬಲೀಕರಣಕ್ಕೆ ಮಹತ್ವದ ಆದ್ಯತೆ ನೀಡಲಾಗಿದೆ. ಕಳೆದ 12ರಿಂದ 13 ವರ್ಷಗಳಲ್ಲಿ ದೇಶದಲ್ಲಿ ಸುಮಾರು 50 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಐಐಟಿ ಖರಗ್‌ಪುರದ 75ನೇ ವರ್ಷದ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿ ಮತ್ತು ಬಡತನ ನಿವಾರಣೆಯಲ್ಲಿ ಆಗಿರುವ ಬದಲಾವಣೆಗಳನ್ನು ವಿವರಿಸಿದರು.

ಹಿಂದಿನ ಸರ್ಕಾರಗಳು ಬಡತನ ನಿರ್ಮೂಲನೆ ಕುರಿತು ಕೇವಲ ಘೋಷಣೆಗಳನ್ನು ಮಾಡುತ್ತಿದ್ದವು. ಆದರೆ, ಬಡತನ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದ್ದವು ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ವಿಶ್ವ ಬ್ಯಾಂಕ್ ವರದಿಯನ್ನು ಉಲ್ಲೇಖಿಸಿದ ಅವರು, ಕಳೆದ 12ರಿಂದ 13 ವರ್ಷಗಳಲ್ಲಿ ಸುಮಾರು 50 ಕೋಟಿ ಜನರು ಬಡತನದಿಂದ ಹೊರಬಂದಿರುವುದು ದೇಶದ ಆಡಳಿತದ ಧೋರಣೆಯಲ್ಲಿ ಆಗಿರುವ ಬದಲಾವಣೆಯ ಫಲಿತಾಂಶವಾಗಿದೆ ಎಂದರು.
ದೇಶದ ಸಂಪೂರ್ಣ ಸಾಮರ್ಥ್ಯವನ್ನು ಅರಿಯಲು ಸಾಂಪ್ರದಾಯಿಕ ಚಿಂತನೆಗಳಿಂದ ಹೊರಬಂದು ಹೊಸ ಆಲೋಚನೆಗಳಿಗೆ ಅವಕಾಶ ನೀಡಬೇಕು. ಅಭಿವೃದ್ಧಿಯ ಕುರಿತ ನಮ್ಮ ದೃಷ್ಟಿಕೋನದಲ್ಲೂ ಬದಲಾವಣೆಯಾಗಬೇಕು ಎಂದು ಹೇಳಿದರು.
ಐಐಟಿ ಖರಗ್‌ಪುರದ ಐತಿಹಾಸಿಕ ಹಿನ್ನೆಲೆಯನ್ನು ಸ್ಮರಿಸಿದ ಪ್ರಧಾನಿ, ಸ್ವಾತಂತ್ರ್ಯ ಹೋರಾಟಗಾರರನ್ನು ಬಂಧನದಲ್ಲಿಡಲು ಬಳಸಲಾಗುತ್ತಿದ್ದ ಶಿಬಿರವಿದ್ದ ಸ್ಥಳದಲ್ಲಿ ಈ ಸಂಸ್ಥೆ ಸ್ಥಾಪನೆಯಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವುದರ ಜತೆಗೆ ಅವರ ಜೀವನದಿಂದ ಸ್ಫೂರ್ತಿ ಪಡೆಯಬೇಕು ಎಂದು ಕರೆ ನೀಡಿದರು.
ಭಾರತದ ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಕೈಗಾರಿಕಾ ಮತ್ತು ತಾಂತ್ರಿಕ ಬೆಳವಣಿಗೆಯವರೆಗೆ ಐಐಟಿ ಖರಗ್‌ಪುರ ಸಾಕ್ಷಿಯಾಗಿದೆ. ಎತ್ತಿನಗಾಡಿಗಳ ಕಾಲದಿಂದ ಬುಲೆಟ್ ರೈಲುಗಳ ಯುಗದವರೆಗಿನ ಭಾರತದ ಪರಿವರ್ತನೆಯನ್ನು ಈ ಸಂಸ್ಥೆ ಕಂಡಿದೆ ಎಂದು ಹೇಳಿದರು.
ಸೆಮಿಕಂಡಕ್ಟರ್ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ ಮಹತ್ವದ ಪ್ರಗತಿ ಸಾಧಿಸುತ್ತಿದೆ. ಇಂತಹ ಬೆಳವಣಿಗೆಗಳು ಆತ್ಮನಿರ್ಭರ ಭಾರತದ ನಿರ್ಮಾಣಕ್ಕೆ ಬಲ ನೀಡುತ್ತಿವೆ. ತಂತ್ರಜ್ಞಾನದಲ್ಲಿ ಸ್ವಾವಲಂಬನೆ ಸಾಧಿಸಲು ಸಂಶೋಧನೆ ಮತ್ತು ಆವಿಷ್ಕಾರಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಒತ್ತಿಹೇಳಿದರು.
ವಿಕಸಿತ ಭಾರತದ ಗುರಿ ಸಾಧನೆಯಲ್ಲಿ ಶಿಕ್ಷಣ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸಲಿವೆ. ವಿದ್ಯಾರ್ಥಿಗಳು ಸಂಶೋಧನೆ ಮತ್ತು ತಾಂತ್ರಿಕ ಆವಿಷ್ಕಾರಗಳ ಮೂಲಕ ದೇಶದ ಭವಿಷ್ಯ ರೂಪಿಸಬೇಕು ಎಂದು ಪ್ರಧಾನಿ ಕರೆ ನೀಡಿದರು.
2014ರಲ್ಲಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಐಐಟಿ ಖರಗ್‌ಪುರಕ್ಕೆ ಭೇಟಿ ನೀಡಿದ ಮೋದಿ, ನೇತಾಜಿ ಭವನ ಆಡಿಟೋರಿಯಂನಲ್ಲಿ ಸುಮಾರು 30 ನಿಮಿಷಗಳ ಕಾಲ ಭಾಷಣ ಮಾಡಿದರು.