30ನೇ ವಯಸ್ಸಿನಲ್ಲಿ ಕ್ರಿಕೆಟ್‌ಗೆ ವಿದಾಯ ಹೇಳಿದ ಭಾರತದ ಆಟಗಾರ್ತಿ ಎಸ್. ಮೇಘನಾ
ನವದೆಹಲಿ: ಭಾರತದ ಮಹಿಳಾ ಕ್ರಿಕೆಟ್ ತಂಡದ ಟಾಪ್ ಆರ್ಡರ್ ಬ್ಯಾಟರ್ ಎಸ್. ಮೇಘನಾ ತಮ್ಮ 30ನೇ ವಯಸ್ಸಿನಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 2022ರ ಅಕ್ಟೋಬರ್‌ನಲ್ಲಿ ಭಾರತ ತಂಡದ ಪರ ಕೊನೆಯ ಪಂದ್ಯವನ್ನಾಡಿದ್ದ ಅವರು, 2025ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು.
ತಮ್ಮ ನಿವೃತ್ತಿ ನಿರ್ಧಾರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಮೇಘನಾ, ಕ್ರಿಕೆಟ್ ಮೈದಾನವನ್ನು ತಮ್ಮ ಎರಡನೇ ಮನೆಯೆಂದು ಬಣ್ಣಿಸಿದ್ದಾರೆ. ಮೈದಾನವು ಕಷ್ಟಗಳನ್ನು ಎದುರಿಸುವ ಶಕ್ತಿ, ವಿನಯ ಮತ್ತು ಜೀವನಪೂರ್ತಿ ನೆನಪಿನಲ್ಲಿ ಉಳಿಯುವ ಅನುಭವಗಳನ್ನು ನೀಡಿದೆ ಎಂದು ಅವರು ಹೇಳಿದ್ದಾರೆ. ಆಟಗಾರ್ತಿಯಾಗಿ ತಮ್ಮ ಪಯಣ ಮುಗಿದರೂ ಕ್ರಿಕೆಟ್‌ನೊಂದಿಗಿನ ನಂಟು ಮುಂದುವರಿಯಲಿದೆ. ಮುಂದಿನ ಪೀಳಿಗೆಯ ಆಟಗಾರರಿಗೆ ಮಾರ್ಗದರ್ಶನ ನೀಡುವುದು ಹಾಗೂ ಕ್ರೀಡೆಗೆ ಕೊಡುಗೆ ಸಲ್ಲಿಸುವುದು ತಮ್ಮ ಉದ್ದೇಶ ಎಂದು ತಿಳಿಸಿದ್ದಾರೆ.

ಮೇಘನಾ 2016ರ ನವೆಂಬರ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 2022ರ ಫೆಬ್ರವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಅವರು, ಮೂರು ಏಕದಿನ ಪಂದ್ಯಗಳಲ್ಲಿ 114 ರನ್ ಗಳಿಸಿದ್ದಾರೆ. ಭಾರತದ ಪರ 17 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನಾಡಿ 258 ರನ್ ಗಳಿಸಿದ್ದು, ಎರಡೂ ಮಾದರಿಗಳಲ್ಲಿ ತಲಾ ಒಂದು ಅರ್ಧಶತಕ ದಾಖಲಿಸಿದ್ದಾರೆ.
ಮಹಿಳಾ ಪ್ರೀಮಿಯರ್ ಲೀಗ್‌ನ ಮೂರು ಆವೃತ್ತಿಗಳಲ್ಲಿ ಆಡಿರುವ ಮೇಘನಾ, ಮೊದಲಿಗೆ ಗುಜರಾತ್ ಜೈಂಟ್ಸ್ ತಂಡವನ್ನು ಪ್ರತಿನಿಧಿಸಿದ್ದರು. ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಪರ ಆಡಿದ್ದು, 2024ರಲ್ಲಿ ಪ್ರಶಸ್ತಿ ಗೆದ್ದ ತಂಡದ ಭಾಗವಾಗಿದ್ದರು.