ಗುತ್ತಿಗೆದಾರರ ₹38 ಸಾವಿರ ಕೋಟಿ ಬಾಕಿ ಬಿಲ್ ಬಾಕಿ; ಹಿರಿತನ ಆಧಾರದಲ್ಲಿ ಬಿಲ್ ಬಿಡುಗಡೆಗೆ ಸಿಎಂ ಸೂಚನೆ
ಬೆಂಗಳೂರು: ವಿವಿಧ ಸರ್ಕಾರಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಸುಮಾರು ₹38 ಸಾವಿರ ಕೋಟಿ ಮೊತ್ತವನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ನೇತೃತ್ವದ ನಿಯೋಗ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಬಾಕಿ ಬಿಲ್ ಪಾವತಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿತು. ಹಳೆಯ ಕಾಮಗಾರಿಗಳ ಬಿಲ್ ಪಾವತಿಸಿದ ಬಳಿಕವೇ ಹೊಸ ಕಾಮಗಾರಿಗಳ ಬಿಲ್ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿತು.
ಗ್ರಾಮೀಣಾಭಿವೃದ್ಧಿ ಮತ್ತು ರಸ್ತೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸುಮಾರು ₹16 ಸಾವಿರ ಕೋಟಿ ಬಾಕಿ ಬಿಲ್ ಪಾವತಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಜಲಸಂಪನ್ಮೂಲ ಇಲಾಖೆಯೊಂದರಲ್ಲೇ ಸುಮಾರು ₹14 ಸಾವಿರ ಕೋಟಿ ಬಿಲ್ ಬಾಕಿ ಉಳಿದಿದೆ ಎಂದು ಗುತ್ತಿಗೆದಾರರು ಗಮನಕ್ಕೆ ತಂದರು.

ಬಾಕಿ ಮೊತ್ತವನ್ನು ಹಿರಿತನದ ಆಧಾರದ ಮೇಲೆ ಬಿಡುಗಡೆ ಮಾಡಬೇಕು ಎಂದು ನಿಯೋಗ ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ, ನಾಳೆಯಿಂದಲೇ ಬಿಲ್ ಪಾವತಿಗೆ ಸಂಬಂಧಿಸಿದ ಆದೇಶ ಹೊರಡಿಸುವುದಾಗಿ ಹಾಗೂ ಸಿನಿಯಾರಿಟಿ ಪ್ರಕಾರವೇ ಬಾಕಿ ಹಣ ಬಿಡುಗಡೆಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.