ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 29ರವರೆಗೆ ಹಿಂಗಾರು ಮಳೆ ಸಾಧ್ಯತೆ
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 29ರವರೆಗೆ ಹಿಂಗಾರು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ರಾಜಧಾನಿಯಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ ಇದೆ.
ಅಕ್ಟೋಬರ್ 24ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವೆಡೆ ಮಳೆಯೊಂದಿಗೆ ಬಿರುಗಾಳಿ ಬೀಸುವ ನಿರೀಕ್ಷೆಯಿದೆ. ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಕ್ಟೋಬರ್ 25 ಮತ್ತು 26ರಂದು ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಅಕ್ಟೋಬರ್ 27ರಿಂದ 29ರವರೆಗೆ ಕರಾವಳಿ ಕರ್ನಾಟಕದ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು. ಇದೇ ಅವಧಿಯಲ್ಲಿ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ. ಆದರೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಅಕ್ಟೋಬರ್ 29ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ.