ಬುಡಕಟ್ಟು ಸಮುದಾಯದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ: ಸಚಿವ ಟಿ. ರಘುಮೂರ್ತಿ
ಮೈಸೂರು: ಬುಡಕಟ್ಟು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಗಮನ ನೀಡಬೇಕು. ಆಶ್ರಮ ಶಾಲೆಗಳು ಮತ್ತು ವಸತಿ ನಿಲಯಗಳಲ್ಲಿ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸರಗೂರು ಮತ್ತು ಎಚ್.ಡಿ. ಕೋಟೆ ತಾಲೂಕುಗಳ ಪರಿಶಿಷ್ಟ ಪಂಗಡದ ಹಾಡಿಗಳು ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಿಗೆ ಭೇಟಿ ನೀಡಿ, ನಿವಾಸಿಗಳ ಸಮಸ್ಯೆ ಮತ್ತು ಅಹವಾಲುಗಳನ್ನು ಆಲಿಸಿದ ಬಳಿಕ ಅವರು ಮಾತನಾಡಿದರು.
ಬುಡಕಟ್ಟು ಸಮುದಾಯದ ಹಿತರಕ್ಷಣೆ ಮತ್ತು ಸಮಗ್ರ ಅಭಿವೃದ್ಧಿ ಸರ್ಕಾರದ ಆದ್ಯತೆಯಾಗಿದೆ. ಕುಡಿಯುವ ನೀರು, ಬೋರ್‌ವೆಲ್ ದುರಸ್ತಿ, ಸಾಮೂಹಿಕ ಬೋರ್‌ವೆಲ್‌ಗಳ ವ್ಯವಸ್ಥೆ ಹಾಗೂ ಅರಣ್ಯ ಪ್ರದೇಶದ ಬೋರ್‌ವೆಲ್‌ಗಳಿಗೆ ವಿದ್ಯುತ್ ಅಥವಾ ಸೌರಶಕ್ತಿ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಆಧಾರ್, ಪಡಿತರ ಚೀಟಿ, ಹಕ್ಕುಪತ್ರ ಮತ್ತು ಪಹಣಿ ಸೇರಿದಂತೆ ದಾಖಲೆಗಳ ಸಮಸ್ಯೆಗಳನ್ನು ಬಗೆಹರಿಸಿ, ಸರ್ಕಾರದ ಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ನೆಪ ಹೇಳದೆ ಸ್ಥಳೀಯ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.
ಹಾಡಿಗಳ ರಸ್ತೆ, ವಸತಿ, ವಿದ್ಯುತ್ ಮತ್ತು ಆರೋಗ್ಯ ಸೌಲಭ್ಯಗಳ ಸ್ಥಿತಿಗತಿಯನ್ನೂ ಪರಿಶೀಲಿಸಿದ ಸಚಿವರು, ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಒಳಗಿನ ಕುಗ್ರಾಮಗಳಿಗೂ ಸರ್ಕಾರಿ ಸೌಲಭ್ಯ ತಲುಪಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್., ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಶೋಕ್ ದುಡಗಂಟಿ, ಜಂಟಿ ನಿರ್ದೇಶಕ ರಾಜಕುಮಾರ್, ಸಹಾಯಕ ನಿರ್ದೇಶಕ ಶ್ರೀನಿವಾಸ್, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಭಾರತಿ ಸಿ.ಆರ್. ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.