ಮೈಸೂರಿನಲ್ಲಿ ವರ್ಷದಲ್ಲಿ ‘ಮನೆಮನೆಗೆ ಶುದ್ಧ ಜಲ’ ಯೋಜನೆ ಜಾರಿಗೆ ಸೂಚನೆ
ಮೈಸೂರು: ಮನೆಗಳ ನಲ್ಲಿಗಳ ಮೂಲಕ ನೇರವಾಗಿ ಶುದ್ಧ ಕುಡಿಯುವ ನೀರು ಪೂರೈಸುವ ‘ಮನೆಮನೆಗೆ ಶುದ್ಧ ಜಲ’ (Drink Directly from Tap) ಯೋಜನೆಯನ್ನು ಮೈಸೂರು ನಗರದಲ್ಲಿ ಮುಂದಿನ ಒಂದು ವರ್ಷದೊಳಗೆ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಡಾ. ದೇವರಾಜ ಅರಸು ಸಭಾಂಗಣದಲ್ಲಿ ಕುಡಿಯುವ ನೀರು, ಘನತ್ಯಾಜ್ಯ ನಿರ್ವಹಣೆ ಹಾಗೂ ನಗರಾಭಿವೃದ್ಧಿಗೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಸಮಾಲೋಚನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಪ್ರತಿಯೊಂದು ಮನೆಗೂ ನಲ್ಲಿಯ ಮೂಲಕ ನೇರವಾಗಿ ಶುದ್ಧ ಕುಡಿಯುವ ನೀರು ಪೂರೈಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕ ಆರೋಗ್ಯ ರಕ್ಷಣೆ ಮತ್ತು ನಗರವಾಸಿಗಳ ಜೀವನಮಟ್ಟ ಸುಧಾರಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸಲಿದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು.
ಹಲವು ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಜಾರಿಯಲ್ಲಿರುವ ಈ ಮಾದರಿಯನ್ನು ಒಡಿಶಾದ ಪುರಿ ಸೇರಿದಂತೆ ಕೆಲವು ನಗರಗಳಲ್ಲಿಯೂ ಅನುಷ್ಠಾನಗೊಳಿಸಲಾಗಿದೆ. ಮೈಸೂರಿನಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿ, ಅದರ ಸಾಧಕ-ಬಾಧಕಗಳನ್ನು ಪರಿಶೀಲಿಸಿದ ಬಳಿಕ ರಾಜ್ಯದ ಇತರ ನಗರಗಳಿಗೂ ವಿಸ್ತರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಕೊಳಗೇರಿ ಪ್ರದೇಶಗಳ ಸಮಗ್ರ ಪರಿವರ್ತನೆ, ತಂತ್ರಜ್ಞಾನ ಆಧಾರಿತ ಯೋಜನೆಗಳ ಅನುಷ್ಠಾನ, ಸಾಮಾಜಿಕ ಮೂಲಸೌಕರ್ಯಗಳ ಬಲವರ್ಧನೆ, ಮೂಲಭೂತ ನಾಗರಿಕ ಸೌಲಭ್ಯಗಳ ಸುಧಾರಣೆ ಹಾಗೂ ಸುಸ್ಥಿರ ಜೀವನೋಪಾಯದ ಅವಕಾಶಗಳ ಸೃಷ್ಟಿ ಕುರಿತು ಸಮಾಲೋಚನೆ ನಡೆಸಲಾಯಿತು.
ಒಡಿಶಾ ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ.ಜಿ. ಮತಿ ವಾತನನ್ ಅವರು ಸಭೆಯಲ್ಲಿ ಭಾಗವಹಿಸಿ, ತಮ್ಮ ಆಡಳಿತಾತ್ಮಕ ಅನುಭವದ ಆಧಾರದ ಮೇಲೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ. ಕಾವೇರಿ, ಪೌರಾಡಳಿತ ನಿರ್ದೇಶನಾಲಯದ (ಡಿಎಂಎ) ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ಕೆಯುಡಬ್ಲ್ಯುಎಸ್ಡಿಬಿ) ನಿರ್ದೇಶಕರು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.