ಅಂಡರ್-19 ಏಷ್ಯಾಕಪ್ ಕ್ರಿಕೆಟ್: ಅಫ್ಘಾನಿಸ್ತಾನ ಮಣಿಸಿ ಫೈನಲ್ಗೆ ಭಾರತ ಲಗ್ಗೆ
ಒಮಾನ್: ಅಂಡರ್-19 ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಫೈನಲ್ ಪ್ರವೇಶಿಸಿದೆ. ಎರಡನೇ ಸೆಮಿಫೈನಲ್ನಲ್ಲಿ ಅಫ್ಘಾನಿಸ್ತಾನ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದ ಭಾರತ, ಪ್ರಶಸ್ತಿ ಸುತ್ತಿನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.
ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ನಾಯಕ ಲಕ್ಷ್ಯ ರಾಜೇಶ್ ರೈಚಂದಾನಿ ಅವರ ಅಜೇಯ 93 ರನ್ಗಳ ನೆರವಿನಿಂದ 36.5 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 230 ರನ್ ಗಳಿಸಿ ಜಯ ಸಾಧಿಸಿತು.

ನಾಯಕನ ಜವಾಬ್ದಾರಿಯುತ ಬ್ಯಾಟಿಂಗ್ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿತು.
ಮೊದಲ ಸೆಮಿಫೈನಲ್ನಲ್ಲಿ ಬಾಂಗ್ಲಾದೇಶ ವಿರುದ್ಧ 9 ವಿಕೆಟ್ಗಳ ಜಯ ಸಾಧಿಸಿದ ಪಾಕಿಸ್ತಾನವೂ ಫೈನಲ್ಗೆ ಲಗ್ಗೆ ಇಟ್ಟಿದೆ. ಶನಿವಾರ ನಡೆಯಲಿರುವ ಪ್ರಶಸ್ತಿ ಹಣಾಹಣಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಯುವ ತಂಡಗಳು ಮುಖಾಮುಖಿಯಾಗಲಿವೆ. ಏಷ್ಯಾಕಪ್ ಕಿರೀಟಕ್ಕಾಗಿ ಉಭಯ ತಂಡಗಳ ನಡುವೆ ರೋಚಕ ಪೈಪೋಟಿ ನಿರೀಕ್ಷಿಸಲಾಗಿದೆ.